ಬೆಂಗಳೂರು, ಜೂ.೧೫:ಶೈಕ್ಷಣಿಕ ವರ್ಷ ಆರಂಭವಾಗಿರುವ ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ.
ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ ೩೦ ರಷ್ಟು ವಿನಾಯ್ತಿ ನೀಡಿ ಶೇ ೭೦ ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ.
ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮಥ್ರ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ ?ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ ಎಂದಿದ್ದಾರೆ
ಖಾಸಗಿ ಶಾಲೆಗಳ ಶುಲ್ಕವನ್ನುಸರ್ಕಾರ ನಿರ್ಧರಿಸಬೇಕು-ಸಿಎಂಗೆ ಸಿದ್ದು ಪತ್ರ
Share