ಭುವನಶ್ವರ,ಮೇ,26:ಯಸ್ ಚಂಡಮಾರುತ ಇಂದು ಮಧ್ಯಾಹ್ನ ಒಡಿಶಾದ ಭದ್ರಕ್ ಜಿಲ್ಲೆಯ ಧಾಮ್ರ ಬಂದರು ಭೂ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ .
ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ಉಮಾಶಂಕರ್ ದಾಸ್ ಅವರು ಬುಧವಾರ ಬೆಳಗ್ಗೆ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ‘ಯಸ್’ ಚಂಡಮಾರುತ ಮಧ್ಯಾಹ್ನದ ವೇಳೆಗೆ ಭೂಪ್ರದೇಶಕ್ಕೆ ಅಪ್ಪಳಿಸಲಿದೆ ಎಂದು ಹೇಳಿದ್ದಾರೆ.
ಕಡಲ ತೀರದ ಅನೇಕ ಪ್ರದೇಶಗಳಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದೆ. ಸದ್ಯ ಗಂಟೆಗೆ 130 ರಿಂದ 140 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮಧ್ಯಾಹ್ನದ ಹೊತ್ತಿಗೆ ಗಾಳಿಯ ವೇಗ ಮತ್ತಷ್ಟು ತೀವ್ರವಾಗಲಿದೆ. 155 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಉಮಾಶಂಕರ್ ದಾಸ್ ಹೇಳಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ, ಪೂರ್ವ ಕರಾವಳಿಯಲ್ಲಿರುವ ಒಡಿಶಾ ಮತ್ತು ಪಶ್ಚಿಮ ಬಂಗಾಳದ 11 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಲಾಗಿದೆ. ನೆರೆಯ ಜಾರ್ಖಂಡ್‌ಗೂ ಮುನ್ನೆಚ್ಚರಿಕೆ ನೀಡಲಾಗಿದೆ.
ಎನ್‌ಡಿಆರ್‌ಎಫ್‌ನ 112 ತಂಡ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 112 ತುಕಡಿಗಳನ್ನು ನಿಯೋಜಿಸಲಾಗಿದೆ. ಇದರಲ್ಲಿ 52 ತಂಡಗಳನ್ನು ಒಡಿಶಾಕ್ಕೆ ಹಾಗೂ 45 ತಂಡಗಳನ್ನು ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ. ಉಳಿದ ತಂಡಗಳು ಆಂಧ್ರಪ್ರದೇಶ, ತಮಿಳುನಾಡು, ಜಾರ್ಖಂಡ್ ಹಾಗೂ ಅಂಡಮಾನ್ ನಿಕೋಬಾರ್ ಗೂ ತೆರಳಲಿವೆ.