ಉಡುಪಿ,ಆ,21-ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು ಪೊಲೀಸ್ ಠಾಣೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಬ್ರಹ್ಮಾವರ ಠಾಣೆ ಬಳಿ ಜನ ಸೇರುವಂತಿಲ್ಲ. ಪ್ರತಿಭಟನೆ ನಡೆಸುವಂತಿಲ್ಲ ಎಂದು ಖಡಕ್ ಆದೇಶ ಹೊರಡಿಸಲಾಗಿದೆ ಇನ್ನು ಬ್ರಹ್ಮಾವರ ಪೊಲೀಸ್ ಠಾಣೆಯ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೆ.ಟಿ ಸ್ವರೂಪ ಅವರು ಆದೇಶಿಸಿದ್ದಾರೆ. ನಾಳೆ ಮಧ್ಯಾಹ್ನದವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.