ಸೆ.22 ರಿಂದ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ

Share

ಬೆಂಗಳೂರು, ಸೆ,12-ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಅಧಿಕೃತ ಕಚೇರಿ ಕೃಷ್ಣದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು,2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ.

ಸಮಾಜದಲ್ಲಿ ಅನೇಕ ಜಾತಿಗಳು ಇದ್ದು, ವೈರುಧ್ಯತೆಯಿಂದಾಗಿ ಕೂಡಿದ್ದು, ಅಸಮಾನತೆ ಈಗಲೂ ಇದೆ. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇ ಬೇಕು ಎಂದು ಹೇಳಿದ್ದರು.
ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ.
ಪ್ರತಿಯೊಬ್ಬರ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಸ್ಥಿತಿಗತಿ ಗೊತ್ತಾದರೆ ಮಾತ್ರ ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಸಾಧ್ಯವಿದೆ. ದತ್ತಾಂಶ ಸರಿಯಾಗಿ ಗೊತ್ತಾದರೆ ಮಾತ್ರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ.
ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ.
ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ.
ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ.
ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ.
ತಾತ್ಕಾಲಿಕವಾಗಿ ರೂ.420ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು.
ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು.
ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.
ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು.
ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.
ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

Girl in a jacket
error: Content is protected !!