ನವದೆಹಲಿ,ಜು,೩೦: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೆಹಲಿ ಪ್ರಯಾಣ ಬೆಳಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟ ಆಯೋಜಿಸಿದ್ದರು.
ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮನವಿ
ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದರು.
ಪ್ರಧಾನಿ ಟ್ವೀಟ್
ಈ ಕುರಿತು ಚಿತ್ರದೊಂದಿಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ್ದಾರೆ.
ಕರ್ನಾಟಕದ ಶ್ರೀ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಭೇಟಿಯಾದೆ. ಕರ್ನಾಟಕದ ಪ್ರಗತಿಯ ಹಾದಿಯಲ್ಲಿ ಹೊಸ ಪಯಣವನ್ನು ಆರಂಭಿಸುತ್ತಿರುವ ಅವರಿಗೆ ಶುಭ ಹಾರೈಸಿದ್ದೇನೆ. ಕರ್ನಾಟಕದ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆ ಕೊಟ್ಟಿದ್ದೇನೆ’ ಎಂದು ಮೋದಿ ತಿಳಿಸಿದ್ದಾರೆ.