ಬೆಂಗಳೂರು,ಆ.13- ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಜಿಲ್ಲಾಧಿಕಾರಿ ಮಂಜುನಾಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮುಂತಾದವರು ಭದ್ರತೆಯ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಹೇಳಿದರು. ಬೆಳಗ್ಗೆ 9ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ ನಡೆಸಲಿದ್ದಾರೆ. ನಂತರ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಿ ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಗೌರವ ರಕ್ಷೆ ಸ್ವೀಕರಿಸುವ ಸಲುವಾಗಿ ಆ.11ರಿಂದ ತಾಲೀಮು ನಡೆಸಲಾಗಿದೆ. ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಎಸ್‍ಆರ್‍ಪಿ, ಸಿಆರ್‍ಪಿಎಫ್, ಬಿಎಸ್‍ಎಫ್, ಸಿಎಆರ್, ಕೆಎಸ್‍ಐಎಸ್‍ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಮ್ ಗಾರ್ಡ್, ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್‍ಸ್ಕ್ವಾಡ್, ಬ್ಯಾಂಡ್‍ನ ಒಟ್ಟು 20 ತುಕಡಿಗಳಲ್ಲಿ ಸುಮಾರು 471 ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ಮತ್ತು ಸುರಕ್ಷತೆಗೆ 60 ಸಿಸಿ ಕ್ಯಾಮೆರಾ ಹಾಗೂ ಎರಡು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿರುತ್ತದೆ. ಆಕಸ್ಮಿಕ ವಿಪ್ಪತ್ತು ಸಂಭವಿಸಿದ್ದಲ್ಲಿ ತಕ್ಷಣ ನೆರವಾಗಲು ಆ್ಯಂಬುಲೆನ್ಸ್, ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಗಣ್ಯರು, ಅತಿಗಣ್ಯರು ಸೇರಿದಂತೆ ಇತರೆ ಆಹ್ವಾನಿತರಿಗೆ ಒಂದು ಸಾವಿರ ಆಸನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಈ ಬಾರಿ ವಿಶೇಷವಾಗಿ ವೈದ್ಯರು, ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಕೋವಿಡ್ ವಾರಿಯರ್‍ಗಳು ಸೇರಿದಂತೆ ಒಟ್ಟು ನೂರು ಸಿಬ್ಬಂದಿ ಮತ್ತು ಕೋವಿಡ್‍ನಿಂದ ಗುಣಮುಖರಾಗಿರುವ ಎಲ್ಲ ವಯೋಮಾನದವರು ಒಳಗೊಂಡಂತೆ 25 ಮಂದಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಕ್ರಮ ವಹಿಸಲಾಗಿದೆ. ಶಾಲಾಕಾಲೇಜುಗಳ ವಿದ್ಯಾರ್ಥಿಗಳ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಗೌರವ್ ಗುಪ್ತ ತಿಳಿಸಿದರು.