ಕನ್ನಡಕ್ಕಾಗಿರುವ ಅನ್ಯಾಯವನ್ನು ತಾಕತ್ತಿದ್ದರೆ ಬಿಜೆಪಿ ಸಂಸದರು ಸರಿಪಡಿಸಲು ಎಚ್ ಡಿಕೆ ಸವಾಲು

Share

ಬೆಂಗಳೂರು, ಜೂ.20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ಬಿಜೆಪಿ ತಾಕತ್ತಿದ್ದರೆ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು ಎಂದು ಅವರು ಹೇಳಿದ್ದಾರೆ.

ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್‌ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್‌, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಕೇಂದ್ರ ಪ್ರತಿ ಬಾರಿ ಕನ್ನಡ ನಿರ್ಲಕ್ಷಿಸುತ್ತಿದೆ. ಇದರ ವಿರುದ್ಧ ನಾವೇ ಕೆಲವರು ಮಾತನಾಡುವಂತಾಗಿದೆ. ಕನ್ನಡ ಭಾಷೆ ವಿಚಾರದಲ್ಲಿನ ಕೇಂದ್ರದ ಇಂಥ ನಡವಳಿಕೆಗಳ ವಿರುದ್ಧ ಎಲ್ಲರೂ ಹೋರಾಡಬೇಕು. ಅವರು ನಿರ್ಲಕ್ಷಿಸುವುದು ನಾವು ಎಚ್ಚರಿಸುವುದು, ಅತ್ತು ಕರೆದು ಔತಣ ಪಡೆಯುವುದು ನಿಲ್ಲಬೇಕು. ‘ಕನ್ನಡ ಮರೆತರೆ ಕಷ್ಟ‘ ಎಂಬ ಸಂದೇಶ ರವಾನಿಸಬೇಕು ಎಂದು  ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

 

Girl in a jacket
error: Content is protected !!