ಕಾಂಗ್ರೆಸ್‌ ಹಿರಿಯ ನಾಯಕ ಆಸ್ಕರ್‌ ಫರ್ನಾಂಡಿಸ್‌ ನಿಧನ

Share

ಮಂಗಳೂರು,ಸೆ,೧೩: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್‌ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೮೦ ವರ್ಷ ವಯಸ್ಸಾಗಿತ್ತು. ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡ ಕಾರಣ ಆಸ್ಕರ್ ಫರ್ನಾಂಡಿಸ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಅವರು ಈ ಮೊದಲು ಮನೆಯಲ್ಲಿ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರಿಂದ ತಲೆಗೆ ಏಟಾಗಿತ್ತು. ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲ ಎಂದು ಆಸ್ಕರ್ ನಿರ್ಲಕ್ಷ್ಯ ವಹಿಸಿದ್ದರು. ಆ ಬಳಿಕ, ಮಾಮೂಲಿ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ತಿಳಿದುಬಂದಿತ್ತು. ಹಾಗಾಗಿ, ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು. ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಕರ್ನಾಟಕ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ರಾಜಕೀಯ, ಧಾರ್ಮಿಕ ಹಿರಿಯ ಮುಂದಾಳು ಬಿ ಜನಾರ್ದನ ಪೂಜಾರಿ ಹಾಗೂ ಸ್ಥಳೀಯ ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ್ದರು. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ದೂರವಾಣಿ ಮೂಲಕ ಫರ್ನಾಂಡಿಸ್ ಕುಟುಂಬದವರೊಂದಿಗೆ ಮಾತನಾಡಿದ್ದರು.

ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ೧೯೮೦ರಿಂದ ೧೯೯೬ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಬಳಿಕ, ೧೯೯೮ರಲ್ಲಿ ಹಾಗೂ ೨೦೦೪ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

Girl in a jacket
error: Content is protected !!