ಬೆಂಗಳೂರು,ಮೇ17:ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ,ಹೆಚ್ಚು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ ಸೋಂಕು ನಿಯಂತ್ರಣ ಸಂಬಂಧಿಸಿದಂತೆ ಸಿಎಂ ಎಲ್ಲಾ ಜಿಲ್ಲಾಧಿಕಾರಿಗಳ,ಜಿಲ್ಲಾ ವರಿಷ್ಟಾಧಿಕಾರಿಗಳ ಸಭೆ ನಡೆಸಿದರು.ಈ ವೇಳೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸಮಸ್ಯೆ ಉಲ್ಬಣವಾಗುತ್ತಿದೆ. ಅದರ ಮೇಲೂ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದರು. ಬ್ಲ್ಯಾಕ್ ಫಂಗಸ್ ಹೊಸ ಕಾಯಿಲೆ ಅಲ್ಲ. ಕೆಲ ಔಷಧಗಳ ಬಳಕೆಯಿಂದ ಇದು ಉಲ್ಬಣ ಆಗಲಿದೆ. ಅದಕ್ಕೆ ಸೂಕ್ತ ಚಿಕಿತ್ಸೆ ಮಾಡಬಹುದು ಎಂದರು.
ರಾಜ್ಯದಲ್ಲಿ ಮೇ 24ರವರೆಗೆ ಲಾಕ್‌ಡೌನ್ ಇದೆ. ಲಾಕ್‌ಡೌನ್ ಎಷ್ಟು ದಿನ ಮುಂದುವರಿಸಬೇಕು ಎಂಬುದರ ಬಗ್ಗೆ ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಲಾಕ್‌ಡೌನ್ ಆರ್ಥಿಕ ಪ್ಯಾಕೇಜ್ ಬಗ್ಗೆಯೂ ಚರ್ಚಿಸುತ್ತೇವೆ. ನಂತರ ಸರ್ಕಾರ ಸಮರ್ಪಕ ತೀರ್ಮಾನ ಮಾಡಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.
ಪರೀಕ್ಷಾ ವರದಿಗಳನ್ನು 24 ಗಂಟೆಯೊಳಗೆ ನೀಡಲು ಕ್ರಮ ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಹೋಮ್ ಐಸೋಲೇಷನ್ ಪ್ರಕ್ರಿಯೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು.
ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆಗೆ ಭಾರತ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.
ಹೆಚ್ಚುತ್ತಿರುವ ಸೋಂಕಿತರನ್ನು ರೋಗಲಕ್ಷಣದ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನವನ್ನು ನಿರ್ಧರಿಸುವ ಮೂಲಕ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತರಿ ಪಡಿಸುವಂತೆ ಸೂಚಿಸಲಾಯಿತು.
ಇದಕ್ಕೆ ಪೂರಕ ವ್ಯವಸ್ಥೆಗಳನ್ನು ನೀವು ಮಾಡಿಕೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರುಗಳು, ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಸ್ಥಳ ಗುರುತಿಸಿ, ಅಗತ್ಯ ಸೌಲಭ್ಯ ಒದಗಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಲಾಯಿತು.
ಆಮ್ಲಜನಕ ಪೂರೈಕೆಯನ್ನು ಮುಂಚಿತವಾಗಿಯೇ ಅಂದಾಜಿಸಿ, ಸಕಾಲದಲ್ಲಿ ಪೂರೈಕೆಯಾಗುವುದನ್ನು ಖಾತರಿ ಪಡಿಸಬೇಕು. ತುರ್ತು ಸಂದರ್ಭಗಳಲ್ಲಿ ನೆರೆಯ ಜಿಲ್ಲೆಗಳೊಂದಿಗೆ ಸಮನ್ವಯ ವಹಿಸಿ, ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು.
ಚಿಕಿತ್ಸಾ ಸೌಲಭ್ಯ, ಔಷಧ, ಆಮ್ಲಜನಕ ಮತ್ತಿತರ ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಕೆ ಮಾಡಿಕೊಂಡು, ಹೆಚ್ಚು ಜನರಿಗೆ ಅನುಕೂಲ ಕಲ್ಪಿಸಬೇಕು. ಹೋಮ್-ಐಸೋಲೇಷನ್ ನಲ್ಲಿರುವವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ, ಅವರಿಗೆ ಮೆಡಿಸಿನ್‍ಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಿಬೇಕು ಹಾಗೂ ಅವರ ಆರೋಗ್ಯ ಸ್ಥಿತಿಗಳ ಕುರಿತು ಪ್ರತಿದಿನ ಮಾಹಿತಿ ಪಡೆದುಕೊಳ್ಳಬೇಕು.ಎಲ್ಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರಕ್ಕೆ ಎರಡು ಬಾರಿ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್ ಅಶ್ವತ್ಥ್ ನಾರಾಯಣ್, ಸಚಿವರಾದ ಡಾ. ಕೆ.ಸುಧಾಕರ್, ಅರವಿಂದ ಲಿಂಬಾವಳಿ, ಕೆ ಗೋಪಾಲಯ್ಯ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.