ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿದ ಸಿಎಂ

Share

ಬೆಂಗಳೂರು ಜು, 7: ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಿಎಸ್ಆರ್ ನಿಧಿಯಡಿ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿಸಿರುವುದು ರಾಜ್ಯದಲ್ಲಿಯೇ ಪ್ರಥಮ ಹಾಗೂ ವಿನೂತನವಾಗಿದ್ದು,
ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದಲ್ಲಿಯೇ ಅತಿ ಶೀಘ್ರವಾಗಿ ನಿರ್ಮಾಣಗೊಂಡ ಮೊದಲ ಮೇಕ್ ಶಿಫ್ಟ್ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 70 ಬೆಡ್ ಸಾಮರ್ಥ್ಯದ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ದೊಡ್ಡಬಳ್ಳಾಪುರ ಗ್ರಾಮೀಣ ಭಾಗದ ಜನರಿಗೆ ಈ ಆಸ್ಪತ್ರೆ ಸಹಕಾರಿಯಾಗಲಿದ್ದು, ಕೋವಿಡ್ ನಂತರವೂ ಸಾರ್ವಜನಿಕರ ಸೇವೆಗೆ ಸಹಕಾರಿಯಾಗಲಿದೆ ಎಂದ ಅವರು ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿದ ಕಂಪನಿಗಳಿಗೆ ಸರ್ಕಾರದ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತವು ‘ವೈದ್ಯರ ನಡೆ-ಹಳ್ಳಿ ಕಡೆ’ ಹಾಗೂ ‘ತಜ್ಞ ಮಕ್ಕಳ ವೈದ್ಯರ ನಡೆ-ಹಳ್ಳಿ ಕಡೆ’ ಎಂಬ ವಿನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜಾರಿಗೆ ತಂದು, ವೈದ್ಯರೇ ಜನರ ಬಳಿಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸಿರುವುದು ಶ್ಲಾಘನೀಯ ಎಂದರು.
ಕೋವಿಡ್ ಮೂರನೇ ಅಲೆ ತಡೆಯಲು ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಅಪೌಷ್ಟಿಕತೆ ಹೊಂದಿರುವ 4467 ಮಕ್ಕಳನ್ನು ಗುರುತಿಸಲಾಗಿದ್ದು, ಅವರಿಗೆ ಕೆಎಂಎಫ್ ವತಿಯಿಂದ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಗಿದೆ ಹಾಗೂ ಹೆಚ್ಚುವರಿ ಚಿಕಿತ್ಸೆ ಅಗತ್ಯವಿರುವ ಮಕ್ಕಳಿಗೆ ಚಿಕಿತ್ಸೆ ನೀಡಲಾಗುವುದು ಎಂದರಲ್ಲದೆ, ಈ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತವು ಈಗಾಗಲೇ ಯಶಸ್ಸು ಸಾಧಿಸಿರುವ ಹಿನ್ನೆಲೆ, ಅಭಿನಂದನೆ ಸಲ್ಲಿಸಿದರು.
ಕೋವಿಡ್ ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತ್ಯವಾಗಿದ್ದು, ಈಗಾಗಲೇ ಅನ್ ಲಾಕ್ ಮಾಡಲಾಗಿರುವ ಹಿನ್ನೆಲೆ, ಜನರು ಎಚ್ಚರಿಕೆಯಿಂದ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಪಾಲಿಸಬೇಕು, ತಪ್ಪಿದಲ್ಲಿ ಮತ್ತೆ ಕಠಿಣ ನಿಯಮಗಳನ್ನು ತರಲಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ದೊಡ್ಡಬಳ್ಳಾಪುರಕ್ಕೆ ಅಗತ್ಯವಿರುವ ಸೌಲಭ್ಯಗಳ ಕುರಿತು ಶಾಸಕರು ಗಮನಕ್ಕೆ ತಂದಿದ್ದು, ಹಣಕಾಸಿನ ಸಾಧ್ಯತೆ ಗಮನಿಸಿ, ಪ್ರಾಮಾಣಿಕವಾಗಿ ತಾಲ್ಲೂಕಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ ನೀಡುತ್ತೇನೆ ಎಂದರು.
ಪೌರಾಡಳಿತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ನಾಗರಾಜು(ಎಂ.ಟಿ.ಬಿ) ಅವರು ಮಾತನಾಡಿ, ಕೋವಿಡ್-19 ಸೋಂಕಿನಿಂದ ಎಲ್ಲೆಡೆ ಅನಾಹುತಗಳು ಸಂಭವಿಸಿದ್ದು, ಈ ಸಂದರ್ಭದಲ್ಲಿ ಸರ್ಕಾರದ ಜೊತೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಕೈಜೋಡಿಸುವ ಮೂಲಕ ಕೊರೋನಾ ಮಹಾಮಾರಿಯನ್ನು ತೊಲಗಿಸಲು ಸಹಕರಿಸಿ ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್ ತಡೆಗಟ್ಟಲು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆಯನ್ನು ನೀಡುವ ಮೂಲಕ ಕೋವಿಡ್ ಸೋಂಕು ತಡೆಗಟ್ಟಲು ಶ್ರಮಿಸುತ್ತಿದ್ದಾರೆ ಹಾಗೂ ದೇಶದ ಎಲ್ಲಾ ಪ್ರಜೆಗಳಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಹಸಿವನ್ನು ನೀಗಿಸಲಾಗುತ್ತಿದೆ ಎಂದರು.
ದೊಡ್ಡಬಳ್ಳಾಪುರದಲ್ಲಿ ಯಾವುದೇ ಮೆಡಿಕಲ್ ಕಾಲೇಜು ಹಾಗೂ ದೊಡ್ಡ ಖಾಸಗಿ ಆಸ್ಪತ್ರೆಗಳಿರದ ಹಿನ್ನೆಲೆ, ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣವಾಗಿರುವುದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗಲಿದ್ದು, ಮೇಕ್ ಶಿಫ್ಟ್ ಆಸ್ಪತ್ರೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಿರ್ಮಾಣವಾಗಿರುವುದು ಸಂತಸ ತಂದಿದೆ ಎಂದರು ಹಾಗೂ 4 ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗಿದ್ದು, ಇದರ ಯಶಸ್ಸಿಗೆ ಕಂದಾಯ ಸಚಿವರಾದ ಆರ್. ಅಶೋಕ್ ಹಾಗೂ ಜಿಲ್ಲಾಧಿಕಾರಿಗಳಾದ ಕೆ. ಶ್ರೀನಿವಾಸ್ ಅವರು ಶ್ರಮವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಸಚಿವ ಆರ್.ಅಶೋಕ್ ಮಾತನಾಡಿ,
ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕೋವಿಡ್-19ರ ಮೂರನೇ ಅಲೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ಮಕ್ಕಳ ವೈದ್ಯರ ಕೊರತೆಯಾಗದಂತೆ ಪ್ರತಿ ಜಿಲ್ಲೆಯಲ್ಲಿ ತರಬೇತಿ ನೀಡುವ ಬಗ್ಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ತರಬೇತಿ ನೀಡಲು ನಿಮ್ಹಾನ್ಸ್ ನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ವೈದ್ಯರ ನಡೆ ಹಳ್ಳಿ ಕಡೆ ಹಾಗೂ ತಜ್ಞ ಮಕ್ಕಳ ವೈದ್ಯರ ನಡೆ ಹಳ್ಳಿ ಕಡೆ ಎಂಬ ವಿನೂತನ ಕಾರ್ಯಕ್ರಮಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿ ಯಶಸ್ವಿಗೊಳಿಸಲಾಗಿದ್ದು, ವೈದ್ಯರೇ ನೇರವಾಗಿ ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಹಾಗೂ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಮಾತನಾಡಿ, ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆ ಎದುರಿಸಲು ತಾಲ್ಲೂಕಿನಲ್ಲಿ ಬಹಳಷ್ಟು ತೊಂದರೆ ಅನುಭವಿಸಿದ ಹಿನ್ನಲೆ, ಮೂರನೇ ಅಲೆ ಎದುರಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರ ಫಲವಾಗಿ ವಿಶ್ವಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೈಗಾರಿಕಾ ಸಂಸ್ಥೆಗಳ ಸಹಯೋಗದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ ಎಂದರು.
ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ತಾಲ್ಲೂಕಿನಲ್ಲಿ ಏಳು ಎಕರೆ ಜಮೀನು ಮಂಜೂರು ಮಾಡಲಾಗಿದ್ದು, ಬಯಲು ಸೀಮೆಯಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದ್ದು, ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮಾಡಬೇಕು ಎಂದರಲ್ಲದೆ, ನಾಯಂಡನಹಳ್ಳಿಯ ವೃಷಭಾವತಿ ನದಿಯ ಸಂಸ್ಕರಿಸಿದ ನೀರನ್ನು ದೊಡ್ಡಬಳ್ಳಾಪುರಕ್ಕೆ ಹರಿಸಬೇಕು ಎಂದು ಮನವಿ ಮಾಡಿದರು.
ತಾಲ್ಲೂಕಿಗೆ ವೈದ್ಯಕೀಯ ಕಾಲೇಜು, ನರ್ಸಿಂಗ್ ತರಬೇತಿ ಸಂಸ್ಥೆ, ಸಾಸಲು ಹೋಬಳಿಗೆ ಪದವಿ ಪೂರ್ವ ಕಾಲೇಜು, ಕಸಬಾ ಹಾಗೂ ಸಾಸಲು ಹೋಬಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಕಾರ್ಯಕ್ರಮದ ವೇದಿಕೆಯ ಮುಂಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆರೋಗ್ಯ ಶಿಕ್ಷಣ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ, ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ವಿಶ್ವನಾಥ ರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಟಿಪಿಎಂಸಿ ಅಧ್ಯಕ್ಷ ಸಿದ್ದರಾಮಯ್ಯ, ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೋಲಿಸ್ ಅಧೀಕ್ಷಕ ಡಾ. ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಡಾ. ಅಂತೋಣಿ ಮರಿಯಪ್ಪನ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತಿ ರಿದ್ದರು.
ಕಾರ್ಯಕ್ರಮದ ನಂತರ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಬಾರಿಗೆ ಬ್ಲಾಕ್ ಫಂಗಸ್ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸೋಂಕಿತ ವ್ಯಕ್ತಿಯೊಂದಿಗೆ ವಿಡಿಯೋ ಸಂವಾದ ನಡೆಸಿದರು ಹಾಗೂ ಹಾಗೂ ಶಸ್ತ್ರಚಿಕಿತ್ಸಕ ಡಾ. ಸಂತೋಷ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

Girl in a jacket
error: Content is protected !!