ದೆಹಲಿ ಗಣರಾಜ್ಯೋತ್ಸವದಲ್ಲಿಲಕ್ಕುಂಡಿ ಶಿಲ್ಪಕಲೆಗಳ ಅನಾವರಣ

Share

ದೆಹಲಿ ಗಣರಾಜ್ಯೋತ್ಸವದಲ್ಲಿ ಲಕ್ಕುಂಡಿ ಶಿಲ್ಪಕಲೆಗಳ ಅನಾವರಣ

By ಕೆಂಧೂಳಿ
ನವದೆಹಲಿ, ಜ. 22– ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್‌) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.
ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ.
ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಇಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌, ಐಪಿಎಸ್‌ ಅವರು ನುಡಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ವಾರ್ತಾ ಇಲಾಖೆಯ ಆಯುಕ್ತರು ತಿಳಿಸಿದರು.

ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌, ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

ಕರ್ನಾಟಕದ ಸಮೃದ್ದಿಯ ಆಚರಣೆಗಳು ಮತ್ತು ಕರ್ನಾಟಕ ಒಂದು ರಾಜ್ಯ ಹಲವು ಜಗತ್ತುಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ʼಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು ಎಂದು ವಿವರಿಸಿದರು.

ಗದಗದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ ಅವರು ಒದಗಿಸಿದ ಛಾಯಾಚಿತ್ರಗಳು ಮತ್ತು ಮಾಹಿತಿ ಸೇರಿದಂತೆ ವಿಷಯ ಪರಿಣತರು – ತಜ್ಞರು, ಕಲಾನಿರ್ದೇಶಕರು ಮತ್ತು ಕಲಾವಿದರೊಂದಿಗೆ ಪರಾಮರ್ಶಿಸಿಕೊಂಡು ಇಲಾಖೆಯು ಈ ಕೆಲಸವನ್ನು ಕೈಗೆತ್ತಿಕೊಂಡಿತ್ತು. ಹಾಕಿಕೊಂಡ ಕಾರ್ಯತಂತ್ರದ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದೆ. ಇದಕ್ಕಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೈಜೋಡಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಆರಂಭದಲ್ಲಿ ದೆಹಲಿಯಲ್ಲಿ ಕವಿದಿದ್ದ ದಟ್ಟ ಮಂಜು, ಹೊಂಜು ಮತ್ತು ಮಳೆ ಎಲ್ಲವೂ ಸವಾಲುಗಳು ಕಂಡಿದ್ದವು. ಇಂದು ಅವುಗಳೆಲ್ಲವೂ ಈ ನಮ್ಮ ಸ್ತಬ್ಧಚಿತ್ರದಲ್ಲಿ ಕರಗಿ ಹೋಗಿವೆ. ಜೀವಕಳೆಯಿಂದ ಕೂಡಿರುವ ಸ್ತಬ್ಧಚಿತ್ರವನ್ನು ರಾಜ್ಯದ ಪರವಾಗಿ ಪ್ರದರ್ಶಿಸಿಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತದೆʼ ಎಂದು ಆಯುಕ್ತರಾದ ಹೇಮಂತ್‌ ಎಂ. ನಿಂಬಾಳ್ಕರ್‌ ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

Girl in a jacket
error: Content is protected !!