ಮಾಜಿ ಸಚಿವ ಸಿ.ಎಂ.ಉದಾಸಿ ನಿಧನ

Share

ಬೆಂಗಳೂರು,ಜೂ,೦೮: ಮಾಜಿ ಸಚಿವ ಹಾಗೂ ಹಾಲಿ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನರಾಗಿದ್ದಾರೆ.
ಅವರಿಗೆ ೮೫ ವರ್ಷ ವಯಸ್ಸಾಗಿತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಗೆ ಕಳೆದ ೧೫ ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಾರದ ಹಿಂದೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಮಂಗಳವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿ, ಮಧ್ಯಾಹ್ನದ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ ನೀಲಮ್ಮ, ಪುತ್ರ ಸಂಸದ ಶಿವಕುಮಾರ ಉದಾಸಿ, ಪುತ್ರಿ ಜಯಶ್ರೀ ಇದ್ದಾರೆ.
ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ೧೯೮೩ರಿಂದ ನಿರಂತರವಾಗಿ ೯ ಬಾರಿ ಸ್ಪರ್ಧಿಸಿ, ೬ ಬಾರಿ ಜಯಗಳಿಸಿ, ೩ ಬಾರಿ ಪರಾಭವಗೊಂಡಿದ್ದರು. ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ, ನಂತರ ಮೂರು ಬಾರಿ ಜನತಾದಳ, ಒಂದು ಬಾರಿ ಜೆಡಿಯು, ಒಂದು ಬಾರಿ ಕೆಜಿಪಿ ಹಾಗೂ ಮೂರು ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು.ಹಾನಗಲ್ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದರು. ನಂತರ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಸಣ್ಣ ನೀರಾವರಿ ಹಾಗೂ ಜವಳಿ ಖಾತೆಗಳನ್ನು ನಿಭಾಯಿಸಿದ್ದರು. ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ, ಜೆ.ಎಚ್. ಪಟೇಲ್, ಬಿ.ಎಸ್. ಯಡಿಯೂರಪ್ಪ ಅವರ ಸಂಪುಟ ಸಹೋದ್ಯೋಗಿಯಾಗಿ ಕಾರ್ಯ ನಿರ್ವಹಿಸಿದ್ದರು.

ಸಂತಾಪ: ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,ಉಪ ಮುಖ್ಯಮಂತ್ರಿಗಳಾದ ಡಾ.ಆಶ್ವತ್ಥ್ ನಾರಾಯಣ,ಲಕ್ಷ್ಮಣ ಸವದಿ, ಗೋವಿಂದ್ ಕಾರಜೋಳ,ಸಚಿವರಾದ ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ,ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡ,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Girl in a jacket
error: Content is protected !!