ಬೆಂಗಳೂರು,ಆ.೧೦: ರಾಜ್ಯ ಸರ್ಕಾರದ ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಶಾಲುಗಳನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಹೂಗುಚ್ಚ ಸ್ವೀಕರಿಸಲು ನಿರಾಕರಿಸಿದ ಮುಖ್ಯಮಂತ್ರಿ, ಇದು ಅನಾವಶ್ಯಕ ವೆಚ್ಚ. ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಚ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಈ ಸಂಪ್ರದಾಯವೇ ಬೇಡ ಎಂದು ಸೂಚಿಸಿದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವಂತಹ ಸಭೆ ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು ಸೂಚಿಸಿದ್ದಾರೆ.
ಸಭೆ ಸಮಾರಂಭಗಳಲ್ಲಿ ಹೂಗುಚ್ಛ , ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಮೊದಲಾದ ಯಾವುದೇ ರೀತಿಯ ಕಾಣಿಕೆಗಳನ್ನು ನೀಡದಂತೆ ನಿರ್ದೇಶನ ನೀಡಿದ್ದಾರೆ. ಕಾಣಿಕೆ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು. ಈ ನಿರ್ದೇಶನವನ್ನು ಚಾಚೂತಪ್ಪದೆ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನಕೊಳ್ಳಪಡುವ ಎಲ್ಲ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.
ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಹೂ ಗುಚ್ಚ,ಹಾರ – ಶಾಲು ನೀಡಲು ನಿಷೇಧಿಸಿದ ಸಿಎಂ
Share